ಶಿಕ್ಷಕರ ಆಯ್ಕೆಪಟ್ಟಿ ರದ್ದು: 1:1ರ ತಾತ್ಕಾಲಿಕ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

ಶಿಕ್ಷಕರ ಆಯ್ಕೆಪಟ್ಟಿ ರದ್ದು: 1:1ರ ತಾತ್ಕಾಲಿಕ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್


ಬೆಂಗಳೂರು: ರಾಜ್ಯದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಜತೆಗೆ, ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರ ಪರಿಗಣಿಸಿ ಹೊಸದಾಗಿ ಪಟ್ಟಿ ಸಿದ್ಧಪಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿದ್ದ ಶಿಕ್ಷಣ ಇಲಾಖೆಯ ಕ್ರಮ ಪ್ರಶ್ನಿಸಿ ಅಕ್ಷತಾ ಚೌಗಲ ಸೇರಿ ನೂರಾರು ಮಹಿಳಾ ಅಭ್ಯರ್ಥಿಗಳು ಸಲ್ಲಿಸಿದ್ದ 80 ತಕರಾರು ಅರ್ಜಿಗಳನ್ನು ಸೋಮವಾರ ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದೆ.

ಅರ್ಜಿದಾರರ ವಾದವೇನು…?
ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದವರ ಹೆಸರುಗಳಿವೆ. ಈ ಬಗ್ಗೆ ಡಿಡಿಪಿಐಗಳನ್ನು ವಿಚಾರಿಸಿದಾಗ ವಿವಾಹಿತ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ಜಾತಿ ಪ್ರಮಾಣಪತ್ರದ ಬದಲಾಗಿ ತಂದೆಯ ಆದಾಯ/ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿರುವುದರಿಂದ ಅರ್ಜಿದಾರರ ಹೆಸರುಗಳನ್ನು ಕೈಬಿಡಲಾಗಿದೆ. ಇದೇ ಕಾರಣಕ್ಕೆ ಅರ್ಜಿದಾರರನ್ನು ಸಾಮಾನ್ಯ ವರ್ಗಕ್ಕೆ ಸೇರಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಸಾಮಾನ್ಯ ಆಭ್ಯರ್ಥಿಗಳ ವರ್ಗಕ್ಕೆ ಸೇರ್ಪಡೆ ಮಾಡಿರುವ ಕ್ರಮ ಸರಿಯಿಲ್ಲ. ಜತೆಗೆ, ಪತಿಯ ಆದಾಯ ಮತ್ತು ಜಾತಿ ಪ್ರಮಾಣಪತ್ರವನ್ನು ಸಲ್ಲಿಸುವಂತೆ ಕೋರುವುದು ಕಾನೂನಿಗೆ ವಿರುದ್ಧವಾಗಿದೆ. ಆದ್ದರಿಂದ, ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದಿಸಿದ್ದರು.

ಪ್ರಕರಣವೇನು..? ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅರ್ಜಿದಾರ ಅಭ್ಯರ್ಥಿಗಳು ಉತ್ತಮ ಅಂಕ ಗಳಿಸಿದ್ದರು. ಅಲ್ಲದೆ, 1:2 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ದಾಖಲೆಗಳ ಪರಿಶೀಲನೆಗೆ ಅರ್ಹರಾಗಿದ್ದರು. ದಾಖಲೆಗಳನ್ನು ಪರಿಶೀಲಿಸಿದ್ದ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, 2022ರ ನ.18ರಂದು ಪ್ರಕಟಿಸಿದ್ದ 1:1 ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಇವರ ಹೆಸರಿರಲಿಲ್ಲ. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ: ಹೈಕೋರ್ಟ್ ಆದೇಶದ ಹಿನ್ನೆಲೆ ಕಾನೂನು ಸಲಹೆ ಪಡೆಯಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ನೇಮಕಾತಿಯಲ್ಲಿ 1986ರಿಂದಲೂ ಇಲಾಖೆ ಅನುಸರಿಸುತ್ತಿರುವ ನಿಯಮಗಳನ್ವಯವೇ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಆದ್ದರಿಂದ ಹೈಕೋರ್ಟ್ ನೀಡಿರುವ ತೀರ್ಪಿನ ಆದೇಶ ಪ್ರತಿಯನ್ನು ಸಂಪೂರ್ಣವಾಗಿ ತಿಳಿದು ಮುಂದಿನ ನಡೆಯನ್ನು ತೀರ್ವನಿಸಲಾಗುತ್ತದೆ. ತೀರ್ಪು ಕುರಿತು ಮೇಲ್ಮನವಿ ಅರ್ಜಿ ಸಲ್ಲಿಸಬೇಕೇ ಅಥವಾ ಬೇರೇನು ಮಾಡಬೇಕೆಂಬ ಬಗ್ಗೆ ಕಾನೂನು ಸಲಹೆ ಪಡೆಯಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್. ವಿಶಾಲ್ ಪ್ರತಿಕ್ರಿಯಿಸಿದ್ದಾರೆ.

ವರದಿ:ನಂದಿನಿ ಮೈಸೂರು

Leave a Reply

Your email address will not be published. Required fields are marked *